ದೋಣಿ ಸಾಗಲಿ
ಮಿಸ್ ಲೀಲಾವತಿ ಕುವೆಂಪು
ದೋಣಿ ಸಾಗಲಿ ಮುಂದೆ ಹೋಗಲಿ ದೂರ ತೀರವ ಸೇರಲಿ
ಬೀಸು ಗಾಳಿಗೆ ಬೀಳುತೇಳುತ ತೆರೆಯ ಮೇಗಡೆ ಸಾಗಲಿ || ಪ ||
ಹೊನ್ನಗಿಂಡಿಯ ಹಿಡಿದು ಕೈಯೊಳು ಹೇಮವಾರಿಯ ಚಿಮುಕಿಸಿ
ಮೇಘಮಾಲೆಗೆ ಬಣ್ಣವೀಯುತ ಯಕ್ಷ ಲೋಕವ ವಿರಚಿಸಿ
ನೋಡಿ ಮೂಡಣದಾ ದಿಗಂತದಿ ಮೂಡುವೆಣ್ಣಿನ ಮೈಸಿರಿ
ರಂಜಿಸುತ್ತಿದೆ ಚೆಲುವೆಯಾಕೆಗೆ ಸುಪ್ರಭಾತವ ಬಯಸಿರಿ|| ೧ ||
ಕೆರೆಯ ಅಂಚಿನ ಮೇಲೆ ಮಿಂಚಿನ ಹನಿಗಳಂದದಿ ಹಿಮಮಣಿ
ಮಿಂಚುತೀರ್ಪುವು ಮೂಡುತೈತರೆ ಬಾಲಕೋಮಲ ದಿವಮಣಿ
ಹಸುರು ಜೋಳದ ಹೊಲದ ಗಾಳಿಯು ತೀಡಿ ತಣ್ಣಗೆ ಬರುತಿದೆ
ಹುದುಗಿ ಹಾಡುವ ಮತ್ತ ಕೋಕಿಲ ಮಧುರ ವಾಣಿಯ ತರುತಿದೆ || ೨ ||
ದೂರ ಬೆಟ್ಟದ ಮೇಲೆ ತೇಲುವ ಬಿಳಿಯ ಮೋಡವ ನೋಡಿರಿ
ಅದನೆ ಹೋಲುತ, ಅಂತೆ ತೇಲುತ ದೋಣಿಯಾಟವನಾಡಿರಿ
ನಾವು ಲೀಲಾ ಮಾತ್ರ ಜೀವರು ನಮ್ಮ ಜೀವನ ಲೀಲೆಗೆ
ನಿನ್ನೆ ನೆನ್ನೆಗೆ, ಇಂದು ಇಂದಿಗೆ, ಇರಲಿ ನಾಳೆಯು ನಾಳೆಗೆ || ೩ ||
ಮಿಸ್ ಲೀಲಾವತಿ
ಚಿತ್ರ ನೋಡಿ